ನಾನ್ ಸಿ.ಆರ್.ಝಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಮರಳು ತೆಗೆಯುವ ಬಗ್ಗೆ ಪರಿಶೀಲನೆ: ಸಚಿವ ಆಚಾರ್ ಹಾಲಪ್ಪ ಬಸಪ್ಪ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಜ.29: ಕರಾವಳಿ ಜಿಲ್ಲೆಗಳ ನಾನ್ ಸಿ.ಆರ್.ಝಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಮರಳು ತೆಗೆಯಲು ಅನುಮತಿ ನೀಡುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯದ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ  ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವ ಆಚಾರ್ ಹಾಲಪ್ಪ ಬಸಪ್ಪ ಹೇಳಿದರು.

ಅವರು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  

ನಾನ್ ಸಿ.ಆರ್.ಝಢ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಮರಳು ತೆಗೆಯಲು ಅನುಮತಿ ನೀಡಿದರೆ ಜಿಲ್ಲೆಯ ಜನತೆಗೆ ಕಡಿಮೆ ದರದಲ್ಲಿ ಸಾಕಷ್ಟು ಪ್ರಮಾಣದ ಉತ್ತಮ ಗುಣಮಟ್ಟದ ಮರಳು ದೊರೆಯುವ ಜೊತೆಗೆ ಜಿಲ್ಲೆಯಲ್ಲಿ ಮಳೆಗಾಲದಲ್ಲಿ ಪ್ರವಾಹ ಪರಿಸ್ಥಿತಿಯನ್ನು ನಿಯಂತ್ರಿಸಲು ಸಾಧ್ಯವಾಗಲಿದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಸಚಿವರ ಗಮನಕ್ಕೆ ತಂದರು, ಈ ಬಗ್ಗೆ ಪರಿಶೀಲಿಸಿ, ಜಿಲ್ಲೆಯ ಜನತೆಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ರಾಜ್ಯದಲ್ಲಿ ಮರಳು ಮಿತ್ರ ಆಪ್ ಸಿದ್ಧಗೊಂಡಿದ್ದು, ಪ್ರಾಯೋಗಿಕವಾಗಿ ಜಾರಿಗೆ ತರಲಾಗುವುದು ಎಂದ ಸಚಿವರು, ಉಡುಪಿ ಜಿಲ್ಲೆಯಲ್ಲಿ ಸಹ ಪೈಲಟ್ ಆಗಿ ಯೋಜನೆಯನ್ನು ಆರಂಭಿಸುವಂತೆ ತಿಳಿಸಿದರು. 

ಉಡುಪಿ ಜಿಲ್ಲೆಯಲ್ಲಿ ಯಾವ ಖನಿಜಗಳು ಲಭ್ಯವಿವೆ ಎಂಬ ಬಗ್ಗೆ ಪರಿಶೀಲಿಸಿ, ಈ ಬಗ್ಗೆ ನಿಗಧಿತ ಅವಧಿಯೊಳಗೆ ವರದಿ ನೀಡಿ ಹಾಗೂ ಜಲ್ಲಿ ಕ್ರಷರ್ಗಳನ್ನು ಸ್ಥಾಪಿಸಲು ಅನುಮತಿ ಕೋರಿರುವ ಅರ್ಜಿಗಳು ಸಮರ್ಪಕವಾಗಿದ್ದಲ್ಲಿ ಅನುಮತಿ ನೀಡುವಂತೆ ಮತ್ತು ಜಿಲ್ಲೆಯೊಳಗೆ ಅಕ್ರಮವಾಗಿ ನಡೆಯುವ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಗೆ ಪ್ರಸಕ್ತ ಸಾಲಿನಲ್ಲಿ 3600 ಲಕ್ಷ ರೂ. ರಾಜಸ್ವ ಸಂಗ್ರಹಣೆ ಗುರಿ ನೀಡಿದ್ದು, ಇದುವರೆಗೆ  2800 ಲಕ್ಷ ರೂ. ಸಂಗ್ರಹಣೆಯಾಗಿದ್ದು, ಮಾರ್ಚ್ ಅಂತ್ಯದ ವೇಳೆಗೆ ಸಂಪೂರ್ಣ ಗುರಿ ಸಾಧಿಸುವಂತೆ ಸಚಿವರು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಮೃತ ಯೋಜನೆಯಡಿ ಸ್ತಿçÃಶಕ್ತಿ ಗುಂಪುಗಳಿಗೆ ಕೂಡಲೇ ಭೀಜಧನ ಮಂಜೂರಾತಿಯನ್ನು ಮಾಡುವಂತೆ ತಿಳಿಸಿದ ಸಚಿವರು, ಅಂಗನವಾಡಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಪೌಷ್ಠಿಕ ಆಹಾರವನ್ನು ನೀಡುವಂತೆ ತಿಳಿಸಿದರು. 

ಜಿಲ್ಲೆಯಲ್ಲಿನ ಅಪೌಷ್ಠಿಕ ಮಕ್ಕಳಿಗೆ ಸರಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿ ಅವರನ್ನು ಅಪೌಷ್ಠಿಕತೆಯಿಂದ ಹೊರ ತರಬೇಕು. ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಸಖಿ ಕೇಂದ್ರದಲ್ಲಿ ದಾಖಲಾಗುವ ಮಹಿಳೆಯರಿಗೆ ಎಲ್ಲಾ ರೀತಿಯ ನೆರವು ಒದಗಿಸುವಂತೆ ತಿಳಿಸಿದ ಸಚಿವರು, ಜಿಲ್ಲೆಗೆ ಉದ್ಯೋಗಿನಿ ಯೋಜನೆಯಡಿ ಹೆಚ್ಚಿನ ಗುರಿ ನೀಡುವ ಬಗ್ಗೆ ಪರಿಶೀಲಿಸುವುದಾಗಿ, ವೃದ್ಧಾಶ್ರಮಗಳನ್ನು ತೆರೆಯಲು ಅಗತ್ಯವಿರುವ ಅನುದಾನವನ್ನು 2 ಲಕ್ಷ ರೂ ಗಳಿಂದ 15 ಲಕ್ಷ ರೂ. ಗಳಿಗೆ  ಹೆಚ್ಚಿಸಲಾಗಿದ್ದು, ಈ ಬಗ್ಗೆ ಕೂಡಲೇ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಹೇಳಿದರು.     

ಸಭೆಯಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬೈಂದೂರು   ಶಾಸಕ ಸುಕುಮಾರ ಶೆಟ್ಟಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಾರ್ಯದರ್ಶಿ ಡಾ.ವಿ.ರಾಮ್ ಪ್ರಸಾದ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ, ಕರ್ನಾಟಕ ರಾಜ್ಯ ಮಿನರಲ್ ಕಾರ್ಪೋರೇಷನ್ ಲಿಮಿಟೆಡ್ನ ನಿರ್ದೇಶಕಿ ಕಾವೇರಿ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸಂದೀಪ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶೇಷಪ್ಪ ಮತ್ತಿತರರು ಉಪಸ್ಥಿತರಿದ್ದರು.